ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ತಿಂಗಳು ನಾಲ್ವರು ಸಾವನ್ನಪ್ಪಿದ್ದರು. ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವರು ಗುರುವಾರ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಅಲ್ಲಿ ಮೃತಪಟ್ಟವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ.
ಈ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದಾಗ ಸಭೆ ನಡೆಸಿದ್ದೇನೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲೂ ಇದರ ಬಗ್ಗೆ ಚರ್ಚಿಸಿದ್ದೇವೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಇಂದು ಬಳ್ಳಾರಿಗೆ ಭೇಟಿ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಗುಣಮಟ್ಟವಲ್ಲದ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ನಿಂದ ಬಾಣಂತಿಯರು ಸಾವನ್ನಪ್ಪಿರಬಹುದು. ಸರ್ಕಾರ ಈಗಾಗಲೇ ಔಷಧ ನಿಯಂತ್ರಕರನ್ನು ಅಮಾನತು ಮಾಡಿದ್ದು, ಸಲ್ಯೂಷನ್ ಪೂರೈಕೆ ಮಾಡಿದ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ಇದರ ತನಿಖೆಗಾಗಿ ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿ ವರದಿ ನೀಡಿದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಈಗಾಗಲೇ ಕೆಲವು ಕ್ರಮ ತೆಗೆದುಕೊಳ್ಳಲಾಗಿದೆ. ವರದಿ ಆಧಾರದ ಮೇಲೆ ಮತ್ತಷ್ಟು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಬಳ್ಳಾರಿಯಲ್ಲಿನ ಬಾಣಂತಿಯರ ಇತ್ತೀಚಿನ ಸಾವಿಗೆ ಸಂಬಂಧಿಸಿದಂತೆ ನವೆಂಬರ್ 30 ರಂದು ಉನ್ನತ ಮಟ್ಟದ ಸಭೆ ನಡೆಸಿದ್ದ ಮುಖ್ಯಮಂತ್ರಿ, ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸುವುದರೊಂದಿಗೆ ಸಾವಿನ ಪ್ರಕರಣದ ಕುರಿತು ತನಿಖೆಗೆ ಆದೇಶಿಸಿದ್ದರು.