
ಬೆಂಗಳೂರು: ದಿನಾಂಕ:10-03-2025(ಹಾಯ್ ಉಡುಪಿ ನ್ಯೂಸ್) ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಾಣಿಕೆ ನಡೆಸಿದ್ದ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ನಟಿ ರನ್ಯಾ ರಾವ್ ಗೆ ಕೋರ್ಟ್ ಇಂದು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಪ್ರಕರಣ ಸಂಬಂಧ ಡಿಆರ್ ಐ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಿದ್ದ ಹಿನ್ನೆಲೆಯಲ್ಲಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಈ ವೇಳೆ ನ್ಯಾಯಾಲಯ ನಟಿ ರನ್ಯಾ ರಾವ್ ಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಹೀಗಾಗಿ ನಟಿ ರನ್ಯಾ ರಾವ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಮತ್ತೊಂದೆಡೆ, ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್ ಅವರೊಂದಿಗೆ ಉದ್ಯಮಿ ಪುತ್ರ ತರುಣ್ ಹೆಸರು ಕೇಳಿಬಂದಿತ್ತು. ಹೀಗಾಗಿ ವಿಚಾರಣೆ ಮಾಡಿದ ಅಧಿಕಾರಿಗಳು ನಂತರ ಫೈಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗ ತರುಣ್ ರಾಜುನನ್ನು ಬಂಧಿಸಿದ್ದಾರೆ. ಇನ್ನು ನಟಿ ರನ್ಯಾ ರಾವ್ ಮತ್ತು ತರುಣ್ ರಾಜು ಇಬ್ಬರು ವರ್ಷಗಳಿಂದ ಸ್ನೇಹಿತರಾಗಿದ್ದರು. ರನ್ಯಾ ರಾವ್ ರಿಂದ ತರುಣ್ ರಾಜು ಚಿನ್ನ ತರಿಸಿಕೊಳ್ಳುತ್ತಿದ್ದರು ಎಂದು ಹೇಳಲಾಗುತ್ತಿದೆ. ದುಬೈನಿಂದ 14.80 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಿತ್ತು.