Spread the love

ದಿನಾಂಕ:13-04-2025(ಹಾಯ್ ಉಡುಪಿ ನ್ಯೂಸ್)

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಇತ್ತೀಚಿನ ಬೆಲೆ ಏರಿಕೆ ಮತ್ತು ಭ್ರಷ್ಟಾಚಾರದ ಆರೋಪದ ವಿರುದ್ಧ ಜೆಡಿಎಸ್ ಪಕ್ಷ ಶನಿವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸಚಿವ ಹಾಗೂ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ, ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಸಂಸದ ಮಲ್ಲೇಶ್ ಬಾಬು ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಪಾಲ್ಗೊಂಡರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಜೆಡಿಎಸ್ ಕಾರ್ಯಕರ್ತರು ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ’ ಎಂದು ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಿಸಿರಬಹುದು, ಆದರೆ ಪ್ರತಿಯಾಗಿ, ಬೆಲೆ ಏರಿಕೆಯಿಂದ ಜನರು ಪ್ರತಿನಿತ್ಯ ಸಂಕಷ್ಟಪಡುತ್ತಿದ್ದಾರೆ. ಪ್ರತಿದಿನ ಬೆಲೆಗಳು ಏರಿಕೆಯಾಗುತ್ತಿವೆ. ಇದನ್ನು ಇನ್ನು ಮುಂದೆ ಸಹಿಸಲು ಸಾಧ್ಯವಿಲ್ಲ. ಈ ಸರ್ಕಾರದ ವಿರುದ್ಧ ಪ್ರತಿಭಟಿಸುವುದನ್ನು ಬಿಟ್ಟು ಜನರಿಗೆ ಬೇರೆ ದಾರಿಯಿಲ್ಲ ಎಂದು ಪ್ರತಿಭಟನಾಕಾರರು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ, ಎರಡು ಬಾರಿ ಸಿಎಂ ಆಗಿದ್ದ ವೇಳೆ ನಾನು ಯಾರ ಮೇಲೂ ತೆರಿಗೆ ವಿಧಿಸಿರಲಿಲ್ಲ. ಸಿದ್ದರಾಮಯ್ಯ ಎರಡು ವರ್ಷಕ್ಕೆ 7. 95 ಲಕ್ಷ ಕೋಟಿ ಸಾಲ ಹೊರಿಸಿದ್ದಾರೆ ಎಂದು ದೂರಿದರು.

ಬೆಂಗಳೂರು ನಗರದ ಅಭಿವೃದ್ಧಿಗೆ ಜೆಡಿಎಸ್ ಕೊಡುಗೆ ಅಪಾರವಾಗಿದೆ. ಬೆಂಗಳೂರಿನ 198 ವಾರ್ಡ್ ಗಳಲ್ಲಿಯೂ ಜೆಡಿಎಸ್ ಜನಾಂದೋಲನ ನಡೆಸಲಿದೆ ಎಂದು ಹೇಳಿದರು.

ಪ್ರತಿಭಟನಾ ಸಭೆಯ ನಂತರ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಮಧ್ಯಪ್ರವೇಶಿಸಿದ ಪೊಲೀಸರು ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವಾರು ಶಾಸಕರು ಮತ್ತು ಇತರ ಮುಖಂಡರನ್ನು ವಶಕ್ಕೆ ಪಡೆದರು. ನಂತರ ಅವರನ್ನು ಬಿಡುಗಡೆ ಮಾಡಲಾಯಿತು.

error: No Copying!