Spread the love

ಬೆಂಗಳೂರು: ದಿನಾಂಕ:15-04-2025(ಹಾಯ್ ಉಡುಪಿ ನ್ಯೂಸ್) ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಅವರ ಗೃಹ ಕಚೇರಿ ಕಾವೇರಿಯಲ್ಲಿ ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಆದರೆ ಡೀಸೆಲ್ ಮೇಲಿನ ಸುಂಕ ಇಳಿಸಲು ಒಪ್ಪದ ಹಿನ್ನೆಲೆಯಲ್ಲಿ ಸಭೆ ವಿಫಲವಾಯಿತು.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಬಜೆಟ್‌ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡಿದರು.

ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಸರ್ಕಾರ ಬಡವರ ಪರವಾಗಿದ್ದು ಸರ್ಕಾರದೊಂದಿಗೆ ಲಾರಿ ಮಾಲೀಕರು ಸಹಕರಿಸಬೇಕು. ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಪ್ರತಿ ವರ್ಷ ಸುಮಾರು 14 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ. 83 ಸಾವಿರ ಕೋಟಿ ರೂ. ಈ ವರ್ಷ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಲಾಗಿದೆ ಎಂದು ವಿವರಿಸಿದರು.

ಸಂಚಾರಿ ದಟ್ಟಣೆ ಅವಧಿಯಲ್ಲಿ ನಗರದ ಒಳಗೆ ಲಾರಿಗಳು ಪ್ರವೇಶಿಸುವುದರ ಬಗ್ಗೆ ಇರುವ ನಿರ್ಬಂಧ ತೆರವು ಸೇರಿದಂತೆ ಇತರ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈ ಕುರಿತಾಗಿ ಇನ್ನೊಮ್ಮೆ ಲಾರಿ ಮಾಲೀಕರ ಸಂಘದೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಆದರೆ ಸಭೆಯಲ್ಲಿ ಡೀಸೆಲ್ ಸುಂಕ ಇಳಿಕೆ ಸೇರಿದಂತೆ ಮತ್ತಿತರ ಬೇಡಿಕೆಗಳಿಗೆ ಸಿದ್ದರಾಮಯ್ಯ ಒಪ್ಪದ ಹಿನ್ನೆಲೆಯಲ್ಲಿ ಮಾತುಕತೆ ವಿಫಲವಾಯಿತು.

ತಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳು ಸಭೆಯಿಂದ ಹೊರನಡೆದಿದ್ದಾರೆ. ನಾಳೆಯಿಂದ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.

error: No Copying!