
ದಿನಾಂಕ: 11-05-2025(ಹಾಯ್ ಉಡುಪಿ ನ್ಯೂಸ್)
ಬೆಂಗಳೂರು: ಯುವ ಬ್ರಿಗೇಡ್ ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರು ಭಾರತೀಯ ಸೈನಿಕರ ಆತ್ಮಸ್ಥೈರ್ಯ ಕುಗ್ಗಿಸುವಂತಹ ಹೇಳಿಕೆ ನೀಡುತ್ತಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಅಪ ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪಾಕಿಸ್ತಾನದ ಉಗ್ರರ ಅಡಗು ತಾಣಗಳನ್ನು ಭಾರತೀಯ ಸೇನೆ ಧ್ವಂಸ ಮಾಡಿದೆ. ಇಂತಹ ಸಂದರ್ಭದಲ್ಲಿ ರಾಜಕೀಯ ಲಾಭಕ್ಕಾಗಿ ಪ್ರಚಾರ ಪಡೆಯುವ ಸೂಲಿಬೆಲೆ ಚಕ್ರವರ್ತಿ,ಭಾರತದ ಸೈನಿಕರ ಆತ್ಮಸ್ಥೈರ್ಯ ಕುಗ್ಗಿಸುವಂತಹ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕೂಡಲೇ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು, ಕೂಡಲೇ ಬಂಧಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಚಕ್ರವರ್ತಿ ಸೂಲಿಬೆಲೆ ಪ್ರತಿ ಬಾರಿಯೂ ಸಹ ಹಿಂದೂ ಮುಸ್ಲಿಂ ಹಾಗೂ ಭಾರತ- ಪಾಕಿಸ್ತಾನ ಹೆಸರಿನಲ್ಲಿ ತನ್ನ ಪ್ರಚಾರವನ್ನು ಗಿಟ್ಟಿಸಿಕೊಳ್ಳಲು ಸುಳ್ಳಿನ ಮಾಹಿತಿಯನ್ನು ಹರಿಬಿಡುತ್ತಾರೆ. ಸುಳ್ಳಿನ ಪ್ರಚಾರ ಮಾಡಿ ಸತ್ಯದ ರೀತಿ ಬಿಂಬಿಸುವುದು ಅವರ ಒಂದಂಶದ ಕಾರ್ಯಕ್ರಮವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಪಾಕಿಸ್ತಾನ ಬೆಂಗಳೂರು ನಗರದ ಮೇಲೂ ದಾಳಿ ನಡೆಸುವ ಸಂಭವ ಇದೆ ಎಂಬ ಹೇಳಿಕೆ ನೀಡುವ ಮೂಲಕ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದು ,ಕಾಂಗ್ರೆಸ್ ಪಕ್ಷ ಪಾಕಿಸ್ತಾನವನ್ನು ಬೆಂಬಲಿಸುತ್ತಿದೆ ಎಂಬ ಆರೋಪ ಹಾಗೂ ಆಧಾರ ರಹಿತ ಹೇಳಿಕೆ ನೀಡಿ ಜನರಿಗೆ ತಪ್ಪು ಸಂದೇಶ ರವಾನಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಚಕ್ರವರ್ತಿ ಸೂಲಿಬೆಲೆ ಅವರನ್ನು ಬಂಧಿಸಿ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.