
ದಿನಾಂಕ :13-05-2025(ಹಾಯ್ ಉಡುಪಿ ನ್ಯೂಸ್)
ಕಲಬುರಗಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ‘ಕದನ ವಿರಾಮ’ಕ್ಕೆ ತಮ್ಮ ಸರ್ಕಾರವು ಸಹಾಯ ಮಾಡಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಸರ್ವಪಕ್ಷ ಸಭೆಯಲ್ಲಿ ಸರ್ಕಾರವನ್ನು ಪ್ರಶ್ನಿಸಲಿವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಹೇಳಿದ್ದಾರೆ.
‘ಕದನ ವಿರಾಮ’ ಸೇರಿದಂತೆ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಗೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಶೀಘ್ರದಲ್ಲೇ ಸರ್ವಪಕ್ಷ ಸಭೆ ಕರೆಯುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ವಿಚಾರದಲ್ಲಿ ಕ್ರೆಡಿಟ್ ಪಡೆಯಲು ಟ್ರಂಪ್ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಇವರು (ಪ್ರಧಾನಿ ಮತ್ತು ಕೇಂದ್ರ ಸರ್ಕಾರ) ಇಲ್ಲ ಎಂದು ಹೇಳುತ್ತಿದ್ದಾರೆ. ಇದು ಸೂಕ್ಷ್ಮ ವಿಷಯ. ಸರ್ವಪಕ್ಷ ಸಭೆ ಕರೆದಾಗ, ನಾವು ಈ ಬಗ್ಗೆ ಕೂಲಂಕುಷವಾಗಿ ಚರ್ಚಿಸುತ್ತೇವೆ ಮತ್ತು ಈ ಎಲ್ಲ ವಿಷಯಗಳ ಬಗ್ಗೆ ಸರ್ಕಾರವನ್ನು ಪ್ರಶ್ನಿಸುತ್ತೇವೆ’ ಎಂದರು.
ಟ್ರಂಪ್ ಅವರ ಮಧ್ಯಸ್ಥಿಕೆಗೆ ಪ್ರಧಾನಿ ಮೋದಿ ಮಣಿದಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಈಗ ಅದರ ಬಗ್ಗೆ ಮಾತನಾಡುವುದು ಸರಿಯಲ್ಲ. ನಮಗೆ ಇಂದು ನಮ್ಮ ಪಕ್ಷದ ಸಭೆ ಇದೆ. ನಾನು ಅದಕ್ಕಾಗಿ ಹೋಗುತ್ತಿದ್ದೇನೆ. ನಾನು ಸರ್ವಪಕ್ಷ ಸಭೆ ಕರೆಯುವಂತೆ ಕೇಂದ್ರವನ್ನು ಒತ್ತಾಯಿಸುತ್ತೇನೆ. ಅವರು ಏನು ಮಾಡುತ್ತಾರೆಂದು ನೋಡೋಣ’ ಎಂದು ಹೇಳಿದರು.
ನಾಲ್ಕು ದಿನಗಳ ಕಾಲ ನಡೆದ ಗಡಿಯಾಚೆಗಿನ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ನಂತರ, ಮಿಲಿಟರಿ ಸಂಘರ್ಷವನ್ನು ಕೊನೆಗೊಳಿಸಲು ಭಾರತ ಮತ್ತು ಪಾಕಿಸ್ತಾನ ಶನಿವಾರ ಕದನ ವಿರಾಮ ಒಪ್ಪಂದ ಮಾಡಿಕೊಂಡವು.
ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ ಮತ್ತು ಇತ್ತೀಚೆಗೆ ಘೋಷಿಸಲಾದ ‘ಕದನ ವಿರಾಮ’ ಸೇರಿದಂತೆ ಗಡಿಯಾಚೆಗಿನ ಗುಂಡಿನ ದಾಳಿಯ ಇತ್ತೀಚಿನ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಲು ಕೇಂದ್ರ ಸರ್ಕಾರವು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಬೇಕೆಂದು ಖರ್ಗೆ ಮತ್ತು ಕಾಂಗ್ರೆಸ್ ಪಕ್ಷವು ಈಗಾಗಲೇ ಒತ್ತಾಯಿಸಿದೆ.