
ದಿನಾಂಕ:04-07-2025(ಹಾಯ್ ಉಡುಪಿ ನ್ಯೂಸ್)
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ನೀಡಿದ್ದಾರೆ ಎನ್ನಲಾದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜುಲೈ 8ರವರೆಗೂ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಇಂದು ಆದೇಶ ನೀಡಿದೆ. ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೆಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ನೀಡಿದ ದೂರಿನ ಆಧಾರದ ಮೇಲೆ ಎನ್ ರವಿ ಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ನಿನ್ನೆ ಎಫ್ಐಆರ್ ದಾಖಲಿಸಲಾಗಿತ್ತು. ಈ ಎಫ್ ಐಆರ್ ನ್ನು ಪ್ರಶ್ನಿಸಿ ರವಿಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೆ, ರವಿಕುಮಾರ್ ಹೇಳಿಕೆ ವಿರುದ್ಧ ಕಾಂಗ್ರೆಸ್ MLCಗಳು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿವರಣೆ ಕೋರಿ ರವಿಕುಮಾರ್ ಗೆ ಪತ್ರ ಬರೆದಿದ್ದೇನೆ. ಅವರು ಉತ್ತರಿಸಿದ ನಂತರ, ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೊರಟ್ಟಿ ಹೇಳಿದರು.