Spread the love

ದಿನಾಂಕ:09-07-2025(ಹಾಯ್ ಉಡುಪಿ ನ್ಯೂಸ್) ಬೆಂಗಳೂರು: ಅಮಾನತುಗೊಂಡಿರುವ ಜೆಡಿಎಸ್ ನಾಯಕ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆಯಲು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಬುಧವಾರ ನಿರ್ದೇಶಿಸಿದೆ.

ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ವಿಚಾರಣಾಧೀನ ನ್ಯಾಯಾಲಯ ಅಂದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ.

ವಿಚಾರಣಾಧೀನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಪ್ರಜ್ವಲ್ ರೇವಣ್ಣಗೆ ಸೂಚಿಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರು, ಜಾಮೀನು ಅರ್ಜಿ ಸಲ್ಲಿಸಿದರೆ 10 ದಿನಗಳಲ್ಲಿ ನಿರ್ಧರಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಕ್ಕೆ ಸೂಚನೆ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಎರಡನೇ ಬಾರಿ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಅವರ ವಿರುದ್ಧದ ಗಂಭೀರ ಆರೋಪಗಳು ಮತ್ತು ಸಾಕ್ಷ್ಯ ನಾಶ ಸಾಧ್ಯತೆಯಿಂದ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮಾಜಿ ಸಂಸದನ ಮೊದಲ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು. ಇದೀಗ ಪ್ರಜ್ವಲ್ ಜಾಮೀನಿಗಾಗಿ 2ನೇ ಬಾರಿಗೆ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವಿಡಿಯೋ ಮಾಡಿದ ಆರೋಪಗಳನ್ನು ಒಳಗೊಂಡ ನಾಲ್ಕು ಪ್ರತ್ಯೇಕ ಎಫ್‌ಐಆರ್‌ಗಳಲ್ಲಿ ಪ್ರಜ್ವಲ್ ರೇವಣ್ಣ ಪ್ರಮುಖ ಆರೋಪಿಯಾಗಿದ್ದಾರೆ.

error: No Copying!