
ದಿನಾಂಕ:06-08-2025(ಹಾಯ್ ಉಡುಪಿ ನ್ಯೂಸ್)
ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ನಿಗಮಗಳ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತಡೆಯಾಜ್ಞೆ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿರುವ ಕರ್ನಾಟಕ ಹೈಕೋರ್ಟ್, ನ್ಯಾಯಾಲಯದ ಆದೇಶ ಉಲ್ಲಂಘಿಸಿ ಮುಷ್ಕರ ಮುಂದುವರಿಸಿದರೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಮಂಗಳವಾರ ಎಚ್ಚರಿಸಿದೆ. ಒಂದು ದಿನ ಮುಷ್ಕರ ಮುಂದೂಡುವಂತೆ ಹೈಕೋರ್ಟ್ ಸೂಚನೆ ನೀಡಿದ ನಂತರವೂ ಸಾರಿಗೆ ನೌಕರರು ಇಂದು ಮುಷ್ಕರ ನಡೆಸಿದ್ದರು. ಇದರಿಂದ ಗರಂ ಆದ ಹೈಕೋರ್ಟ್ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯನ್ನು ತರಾಟೆಗೆ ತೆಗೆದುಕೊಂಡಿತು. ಎಸ್ಮಾ ಕಾಯ್ದೆಯಡಿ ಸರ್ಕಾರ ಸಂಘಟನೆಯ ಪದಾಧಿಕಾರಿಗಳನ್ನು ಬಂಧಿಸಬಹುದು ಎಂದು ಖಡಕ್ ಎಚ್ಚರಿಕೆ ನೀಡಿತು. ನಾಳೆ ಮುಷ್ಕರ ನಿಂತಿರುವ ಬಗ್ಗೆ ಮಾಹಿತಿ ನೀಡಬೇಕೆಂದು ಹೈಕೋರ್ಟ್ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಪರ ವಕೀಲರಿಗೆ ಸೂಚಿಸಿ, ಮುಂದಿನ ವಿಚಾರಣೆಯನ್ನು ಆಗಸ್ಟ್ 7ಕ್ಕೆ ಮುಂದೂಡಿದೆ.
ಇನ್ನು ಹೈಕೋರ್ಟ್ ಎಚ್ಚರಿಕೆ ಬೆನ್ನಲ್ಲೇ ಸಾರಿಗೆ ನೌಕರರು ಮುಷ್ಕರವನ್ನು ಮುಂದೂಡಿದ್ದಾರೆ. ಈ ಬಗ್ಗೆ ಮಾತನಾಡಿದ, ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಿರುವುದಾಗಿ ಘೋಷಿಸಿದ್ದು, ಎಲ್ಲಾ ಸಾರಿಗೆ ನೌಕರರು ಈ ಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ತಿಳಿಸಿದರು.