ದಿನಾಂಕ:12-09-2025(ಹಾಯ್ ಉಡುಪಿ ನ್ಯೂಸ್)
ಮದ್ದೂರು: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ನಾಯಕ ಮತ್ತು ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ಪ್ರಕರಣ ದಾಖಲಾಗಿದೆ.
ಮದ್ದೂರು ಪೊಲೀಸ್ ಸಬ್‌ಇನ್ಸ್ ಪೆಕ್ಟರ್ ನೀಡಿದ ದೂರಿನನ್ವಯ ಸಿಟಿ ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ದೂರು ಹಿನ್ನೆಲೆಯಲ್ಲಿ ಅನ್ಯ ಸಮುದಾಯಗಳ ಮಧ್ಯೆ ದ್ವೇಷ ಉಂಟು ಮಾಡುವ ಮತ್ತು ಸೌಹಾರ್ದತಾ ಭಾವನೆಗಳನ್ನು ಕೆರಳಿಸುವ, ದ್ವೇಷ ಉಂಟಾಗುವಂತೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ BNS ಸೆಕ್ಷನ್ 196 (1)ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮದ್ದೂರು ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲೂ ತೂರಾಟ ನಡೆಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಜಾರ್ಚ್ ನಡೆಸಿದ್ದು ಇದರ ವಿರುದ್ಧವೂ ಇದೀಗ ಪ್ರಕರಣ ದಾಖಲಾಗಿದೆ. ಈಮಧ್ಯೆ, 14 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿಯನ್ನು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಬಸವನಗುಡಿ ಪೊಲೀಸರು ಬಂಧಿಸಿದ್ದು ಕೋರ್ಟ್ ಮುಂದೆ ಹಾಜರುಪಡಿಸಿದರು. ಮುಚ್ಚಳಿಕೆ ಬರೆದುಕೊಡಲು ಪುನೀತ್ ಕೆರೆಹಳ್ಳಿ ನಿರಾಕರಿಸಿದ್ದರಿಂದ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
