ದಿನಾಂಕ:21-09-2025(ಹಾಯ್ ಉಡುಪಿ ನ್ಯೂಸ್)
ದೇವಾಲಯದ ಬಾಗಿಲು ತೆರೆದು ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಘಟನೆಯೊಂದು ಹಾಸನ ಜಿಲ್ಲೆ, ಬೇಲೂರು ಪಟ್ಟಣದಲ್ಲಿ ನಡೆದಿದೆ. ಸಾರಿಗೆ ಬಸ್ ನಿಲ್ದಾಣ ಮುಂಭಾಗದ ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಈ ಘಟನೆ ನಡೆದಿದ್ದು, ಬೆಳಗ್ಗೆ ಭಕ್ತಾಧಿಗಳು ಕೈಮುಗಿಯಲು ಹೋದಾಗ ಗಣಪತಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿರುವುದು ಬೆಳಕಿಗೆ ಬಂದಿದೆ.
ಕೋಮು ಸೌಹಾರ್ದ ಕದಡಲು ಕೆಲವು ಕಿಡಿಗೇಡಿಗಳು ಇಂತಹ ದುಷ್ಕೃತ್ಯ ಎಸಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸ್ಥಳೀಯರು ಪ್ರತಿಭಟನೆ ನಡೆಸಿ ಆಗ್ರಹಿಸಿದ್ದಾರೆ. ಈ ನಡುವೆ ದೇವಸ್ಥಾನಕ್ಕೆ ಮುಖ ಮುಚ್ಚಿಕೊಂಡ ಮಹಿಳೆಯೊಬ್ಬರು ಗಣೇಶನ ದೇವಸ್ಥಾನಕ್ಕೆ ಬಂದಿದ್ದು ಮೂರ್ತಿಗೆ ಚಪ್ಪಲಿ ಹಾರ ಹಾಕಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೇಲೂರು ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಮಹಿಳೆಗಾಗಿ ಬೇಲೂರು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ಎಂಎಲ್ ಸಿ ಸಿಟಿ ರವಿ, ಇದು ಹಿಂದೂ ಸಮಾಜವನ್ನು ಕೆರಳಿಸುವ ಒಂದು ವ್ಯವಸ್ಥಿತ ಷಡ್ಯಂತ್ರ ಎಂದು ಗಂಭೀರ ಆರೋಪ ಮಾಡಿದ್ದಾರೆ
