kannadaprabha_2025-11-10_jsi8ivxj_1311645-jail.jpeg
Spread the love

ದಿನಾಂಕ:10-11-2025(ಹಾಯ್ ಉಡುಪಿ ನ್ಯೂಸ್)

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಮೊಬೈಲ್, ಸಾರಾಯಿ ಸರಬರಾಜು ಮಾಡಿ ರಾಜಾತಿಥ್ಯ ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಮುಖ್ಯ ಅಧೀಕ್ಷಕನನ್ನು ವರ್ಗಾವಣೆಗೊಳಿಸಲಾಗಿದೆ.

ಪರಪ್ಪನ ಅಗ್ರಹಾರ ಕಾರಾಗೃಹದ ಕೈದಿಗಳಿಗೆ ನಿಯಮ ಮೀರಿ ವಿಶೇಷ ಸವಲತ್ತು ನೀಡಿರುವ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು  ಈ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಗೃಹ ಸಚಿವ ಪರಮೇಶ್ವರ್ ಅವರು ಇಂದು ಮಹತ್ವದ ಸಭೆ ನಡೆಸಿದ್ದಾರೆ.ಸಭೆಯಲ್ಲಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಗ್ರಹ ಸಚಿವ ಪರಮೇಶ್ವರ್ ಅವರು, ಕಾರಾಗೃಹದ ಅಧೀಕ್ಷಕ ಮ್ಯಾಗೇರಿ, ಸಹಾಯಕ ಅಧೀಕ್ಷಕ ಅಶೋಕ್ ಭಜಂತ್ರಿ ಎಂಬವರನ್ನು ಅಮಾನತುಗೊಳಿಸಿದ್ದು, ಕಾರಾಗೃಹದ ಮುಖ್ಯ ಅಧೀಕ್ಷಕ ಕೆ.ಸುರೇಶ್ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇನ್ನು ಮುಂದೆ ಈ ರೀತಿ ಪ್ರಕರಣ ಮರುಕಳಿಸದೇ ಇರಲು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ  ಮಾತನಾಡಿದ ಪರಮೇಶ್ವರ್ ಅವರು, ಘಟನೆ ಬಗ್ಗೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದ್ದೇವೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ್ ರೆಡ್ಡಿ, ರಿಷ್ಯಂತ್ ಸಮಿತಿಗೆ ಒಂದು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.

ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ 5,000 ಕೈದಿಗಳಿದ್ದು, ಅಪರಾಧಿಗಳು ಮತ್ತು ವಿಚಾರಣಾಧೀನ ಕೈದಿಗಳು ಒಟ್ಟಿಗೆ ಇರುತ್ತಾರೆ. ಹೀಗಾಗಿ ಜೈಲುಗಳ ಮೇಲೆ ನಿಗಾವಹಿಸಲು ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲು ಉದ್ದೇಶಿಸಲಾಗಿದ್ದು, 15 ದಿನದೊಳಗೆ ಇದು ಕಾರ್ಯನಿರ್ವಹಿಸಲಿದೆ. ಇನ್ಮುಂದೆ ಜೈಲಿನ ಮುಖ್ಯಸ್ಥರಾಗಿ ಐಪಿಎಸ್ ಅಧಿಕಾರಿ ನೇಮಕ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

5 ವರ್ಷಗಳ ನಂತರ ಜೈಲಿನ ಅಧಿಕಾರಿಗಳ ವರ್ಗಾವಣೆ ಕಡ್ಡಾಯವಾಗಲಿದ್ದು, ದೀರ್ಘಕಾಲ ಒಂದೇ ಕಡೆ ಕೆಲಸ ಮಾಡಿದರೆ ಬೇರು ಬಿಡುತ್ತಾರೆ. ಅವರು ಪ್ರಭಾವ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಅಂತವರನ್ನು ಬೇರೆಡೆಗೆ ವರ್ಗಾವಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನಿರ್ದೇಶನ ನೀಡಲಾಗಿದ್ದು, ಕೆಪಿಎಸ್ಸಿ ಮೂಲಕ ಅಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು.

ಸಹಾಯಕ ಅಧೀಕ್ಷಕರು ಸೇರಿದಂತೆ 1,000 ಸಿಬ್ಬಂದಿ ನೇಮಕ ಮಾಡಲು ಉದ್ದೇಶಿಸಲಾಗಿದ್ದು, ಸಿಬ್ಬಂದಿ ಕೊರತೆ ನೀಗಿಸಿದರೆ ಎಲ್ಲವನ್ನು ಸಮರ್ಪಕವಾಗಿ ನಿರ್ವಹಿಸಬಹುದು ಎಂದು ಹೇಳಿದರು.

error: No Copying!