ದಿನಾಂಕ:16-01-2026(ಹಾಯ್ ಉಡುಪಿ ನ್ಯೂಸ್)
ಮನೆ ನಿರ್ಮಾಣದ ಸಮಯದಲ್ಲಿ ನಿಧಿ ಸಿಕ್ಕ ನಂತರ ರಾಜ್ಯದ ಗಮನ ಸೆಳೆದಿದ್ದ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ರಾಜ್ಯ ಸರ್ಕಾರ ಶುಕ್ರವಾರ ನಿಧಿ ಹುಡುಕಾಟಕ್ಕೆ ಮುಂದಾಗಿದೆ.
ಕೇಂದ್ರ ಪುರಾತತ್ವ ಇಲಾಖೆಯಿಂದ ಅನುಮತಿ ಸಿಕ್ಕ ಹಿನ್ನಲೆಯಲ್ಲಿ ಇಂದಿನಿಂದ ಉತ್ಖನನ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಉತ್ಖನನದ ಹಿನ್ನೆಲೆಯಲ್ಲಿ ಇಡೀ ಗ್ರಾಮವನ್ನೇ ಸ್ಥಳಾಂತರಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗದಗ ಜಿಲ್ಲಾಧಿಕಾರಿ ಸಿಎನ್ ಶ್ರೀಧರ್, ಗ್ರಾಮವನ್ನು ಸ್ಥಳಾಂತರಿಸುವ ನಿರ್ಧಾರವು ಉತ್ಖನನದ ಸಂಶೋಧನೆಗಳ ಮೇಲೆ ಅವಲಂಬಿತವಾಗಿದೆ ಎಂದು ಹೇಳಿದ್ದಾರೆ. ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಾಲಯದ ಆವರಣದಲ್ಲಿ ಪೂರ್ಣ ಪ್ರಮಾಣದ ಉತ್ಖನನವನ್ನು ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದೆ. ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಇಲಾಖೆ, ಲಕ್ಕುಂಡಿ ಪರಂಪರೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಜಿಲ್ಲಾಡಳಿತ ಜಂಟಿಯಾಗಿ ಈ ಯೋಜನೆಯನ್ನು ಕೈಗೆತ್ತಿಕೊಂಡಿವೆ.
