ದಿನಾಂಕ:24-03-2026(ಹಾಯ್ ಉಡುಪಿ ನ್ಯೂಸ್)
ಬೆಂಗಳೂರು: ಹಂತ-ಹಂತವಾಗಿ ಬೇಡಿಕೆ ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವಧನ ಹೆಚ್ಚಳ, ಎಲ್‌ಕೆಜಿ, ಯುಕೆಜಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಬಗ್ಗೆ ಸಚಿವರು ಪದಾಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು.
ಅಂಗನವಾಡಿ ಕೇಂದ್ರಗಳು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಬಗ್ಗೆ ಸರ್ಕಾರ ಸಾಕಷ್ಟು ಕಾಳಜಿ ವಹಿಸಿದೆ. ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ನಾನು ಎಲ್ಲರ ಹಿತರಕ್ಷಣೆಗೆ ಬದ್ಧಳಾಗಿದ್ದೇನೆ ಎಂದು ಸಚಿವರು ತಿಳಿಸಿದರು.
ಈ ವೇಳೆ ಸಂಘದ ಅಧ್ಯಕ್ಷರಾದ ವರಲಕ್ಷ್ಮೀ, ಕಾರ್ಯಾಧ್ಯಕ್ಷರಾದ ಶಾಂತಾ ಎಚ್.ಘಂಟಿ, ಪ್ರಧಾನ ಕಾರ್ಯದರ್ಶಿ ಎಚ್. ಎಸ್.ಸುನಂದಾ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು
