ದಿನಾಂಕ:31-03-2026(ಹಾಯ್ ಉಡುಪಿ ನ್ಯೂಸ್)
ಗುವಾಹಟಿ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಸೀಸನ್ನ ಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್(RR) ತಂಡ ಸೋಮವಾರ ಚೆನ್ನೈ ಸೂಪರ್ ಕಿಂಗ್ಸ್(CSK) ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಇಂದು ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಆರ್ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲ ಬ್ಯಾಟಿಂಗ್ ಮಾಡಿದ ಸಿಎಸ್ಕೆ 19. 4 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು ಕೇವಲ 127 ರನ್ ಗಳಿಸಿತು.
ಸಿಎಸ್ಕೆ ಪವರ್‌ಪ್ಲೇನಲ್ಲಿಯೇ 41 ರನ್ ಗಳಿಗೆ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡು ಆರಂಭದಲ್ಲೇ ಒತ್ತಡಕ್ಕೆ ಸಿಲುಕಿತು. ಆರಂಭಿಕ ಬ್ಯಾಟರ್ ಸಂಜು ಸ್ಯಾಮ್ಸನ್ 6 ರನ್ ಗೆ ಔಟಾಗಿ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದರು. ನಿಧಾನಗತಿಯ ಆರಂಭ ಮಾಡಿದ ರುತುರಾಜ್ ಗಾಯಕ್ವಾಡ್ ಸಹ 6 ರನ್ ಗಳಿಗೆ ಔಟಾಗಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.
ಗೆಲುವಿಗೆ 128 ರನ್ ಗಳ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡ, ವೈಭವ್ ಸೂರ್ಯವಂಶಿಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಕೇವಲ 12.1 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 128 ರನ್ ಗಳಿಸುವ ಮೂಲಕ ಭರ್ಜರಿ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ.
ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಮೂರನೇ ವೇಗದ ಅರ್ಧಶತಕ ಬಾರಿಸಿದ ದಾಖಲೆ ಬರೆದರು.
ಆದಾಗ್ಯೂ ಅರ್ಧಶತಕ ಬಾರಿಸಿದ ಬಳಿಕ ವೈಭವ್ ಸೂರ್ಯವಂಶಿ, ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲಿಲ್ಲ. ಅಂತಿಮವಾಗಿ ವೈಭವ್ ತಮ್ಮ ಇನ್ನಿಂಗ್ಸ್ನಲ್ಲಿ 17 ಎಸೆತಗಳನ್ನು ಎದುರಿಸಿ 5 ಭರ್ಜರಿ ಸಿಕ್ಸರ್ ಮತ್ತು 4 ಬೌಂಡರಿಗಳ ಸಹಿತ 52 ರನ್ ಬಾರಿಸಿ ಔಟಾದರು.
