ದಿನಾಂಕ:11-04-2026(ಹಾಯ್ ಉಡುಪಿ ನ್ಯೂಸ್)
ಬೆಂಗಳೂರು: ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮವಾಗಿ ಉಂಟಾಗಿರುವ ಇಂಧನ ಕೊರತೆ ಕುರಿತು ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರದ ಗಮನಕ್ಕೆ ತಂದಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರಾಜ್ಯಕ್ಕೆ ಅಗತ್ಯವಾದ ಎಲ್‌ಪಿಜಿ ಹಂಚಿಕೆಯನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಆದರೆ, ರಾಜ್ಯಕ್ಕೆ ಸಲ್ಲಬೇಕಾದ ಹಂಚಿಕೆಯನ್ನು ನೀಡಲು ಕೇಂದ್ರ ಸರ್ಕಾರ ಆಸಕ್ತಿ ತೋರಿಸುತ್ತಿಲ್ಲ ಎಂದು ಆರೋಪಿಸಿದರು.
ಇದೇ ವೇಳೆ, ಮುಖ್ಯಮಂತ್ರಿ ಕೂಡ ನಿನ್ನೆ ಈ ವಿಷಯದ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದಾರೆ. ಆದರೆ, ನಮ್ಮ ಮನವಿಗೆ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಇಂಧನ ಸಮಸ್ಯೆ ಮತ್ತಷ್ಟು ಗಂಭೀರವಾಗದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುವುದು. ಚುನಾವಣೆಯ ನಂತರ ಈ ಸಮಸ್ಯೆಯನ್ನು ಪರಿಹರಿಸಲು ವಿಶೇಷ ವ್ಯಕ್ತಿಯನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಗೃಹ ಸಚಿವರು ತಿಳಿಸಿದರು.
