ಸಂಗಾರೆಡ್ಡಿ: ದಿನಾಂಕ:12-05-2026 (ಹಾಯ್ ಉಡುಪಿ ನ್ಯೂಸ್) ಹೈದರಾಬಾದ್‌ನಿಂದ ಬೀದರ್ ಕಡೆಗೆ ಪ್ರಯಾಣಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ ಜಹೀರಾಬಾದ್ ಸಮೀಪ ಭೀಕರ ಅಪಘಾತಕ್ಕೀಡಾಗಿ ಐವರು ಸಾವನ್ನಪ್ಪಿರುವ ದುರ್ಘಟನೆ ಮಂಗಳವಾರ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೀದರ್–ಜಹೀರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಬಸ್ ಮೊದಲು ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬಳಿಕ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದೇ ವೇಳೆ, ಬಸ್‌ನ ಮುಂಭಾಗದಲ್ಲಿ ಕುಳಿತಿದ್ದ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಬಸ್ ಸಂಪೂರ್ಣವಾಗಿ ಪಲ್ಟಿಯಾಗಿದ್ದರಿಂದ ಪ್ರಯಾಣಿಕರಲ್ಲೆಲ್ಲಾ ಆತಂಕ ಮತ್ತು ಕಿರುಚಾಟ ಮೇಳೈಸಿತ್ತು. ಕೆಲವರು ಬಸ್ ಒಳಗೆ ಸಿಲುಕಿಕೊಂಡ ಸ್ಥಿತಿಯಲ್ಲಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ದಾರಿಹೋಕರು ತಕ್ಷಣ ರಕ್ಷಣಾ ಕಾರ್ಯಕ್ಕೆ ಧಾವಿಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದರು. ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿದರು.
ಹೈದರಾಬಾದ್‌ನಿಂದ ಬೀದರ್‌ಗೆ ತೆರಳುತ್ತಿದ್ದ ಈ ಬಸ್‌ನಲ್ಲಿ ಸಾಕಷ್ಟು ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಅಪಘಾತದ ನಿಖರ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ದುರ್ಘಟನೆ ಪ್ರದೇಶದಲ್ಲಿ ಮೃತರ ಕುಟುಂಬಗಳ ಆಕ್ರಂದನ ಮನಕಲಕುವಂತಿದೆ.

