images-3.jpeg
Spread the love

ದಿನಾಂಕ:05-06-2026(ಹಾಯ್ ಉಡುಪಿ ನ್ಯೂಸ್)

ನವದೆಹಲಿ: ನೈರುತ್ಯ ಮುಂಗಾರು ಸಂಪೂರ್ಣ ಚುರುಕುಗೊಂಡಿದ್ದು, ಕರ್ನಾಟಕ ಮತ್ತು ಕೇರಳದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಜೂನ್ 11ರವರೆಗೆ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಮುಂಗಾರಿನ ಪ್ರಭಾವದಿಂದ ಕರ್ನಾಟಕ, ಕೇರಳ, ಗೋವಾ ಹಾಗೂ ಮಹಾರಾಷ್ಟ್ರ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು, ಪ್ರವಾಸಿಗರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಈಗಾಗಲೇ ಕರಾವಳಿ ಕರ್ನಾಟಕದಲ್ಲಿ ಮಳೆ ತನ್ನ ಅಬ್ಬರ ತೋರಿಸಿದ್ದು, ಹೊನ್ನಾವರದಲ್ಲಿ 9 ಸೆಂ.ಮೀ., ಕಾರವಾರ ಮತ್ತು ಮಂಕಿಯಲ್ಲಿ ತಲಾ 7 ಸೆಂ.ಮೀ. ಮಳೆಯಾಗಿದೆ. ಹಲವು ಕಡೆ ರಸ್ತೆಗಳಲ್ಲಿ ನೀರು ನಿಂತಿದ್ದು, ನದಿಗಳು ಮತ್ತು ಹಳ್ಳಗಳು ಉಕ್ಕುವ ಸಾಧ್ಯತೆ ಬಗ್ಗೆ ಸ್ಥಳೀಯ ಆಡಳಿತ ನಿಗಾ ವಹಿಸಿದೆ.

ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ತುಮಕೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಕೆಲ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ 30–40 ಕಿ.ಮೀ. ವೇಗದ ಗಾಳಿ ಬೀಸಬಹುದು ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವೆಡೆ ಮುಂದಿನ ವಾರ ಪೂರ್ತಿ ಮಳೆ ಮುಂದುವರಿಯಲಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಹಾಗೂ ಸಂಚಾರ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ. ರೈತರು ಮತ್ತು ಸಾರ್ವಜನಿಕರು ಹವಾಮಾನ ಇಲಾಖೆಯ ಅಧಿಕೃತ ಸೂಚನೆಗಳನ್ನು ಗಮನಿಸುವಂತೆ ಮನವಿ ಮಾಡಲಾಗಿದೆ.

ಇತ್ತ ಕೇರಳದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದ್ದು, ಹಲವು ಜಿಲ್ಲೆಗಳಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾಸರಗೋಡು, ಕಣ್ಣೂರು, ವೈನಾಡು ಸೇರಿದಂತೆ ಉತ್ತರ ಕೇರಳದ ಜಿಲ್ಲೆಗಳಲ್ಲಿ ಅತಿಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಭೂಕುಸಿತ ಹಾಗೂ ಪ್ರವಾಹದ ಅಪಾಯದ ಬಗ್ಗೆ ಎಚ್ಚರಿಕೆ ನೀಡಲಾಗಿದೆ.
ಅಗತ್ಯವಿಲ್ಲದ ಪ್ರಯಾಣಗಳನ್ನು ತಪ್ಪಿಸಿ, ಮರಗಳ ಕೆಳಗೆ ನಿಲ್ಲಬೇಡಿ, ನದಿಗಳು ಮತ್ತು ಸಮುದ್ರ ತೀರದ ಅಪಾಯಕಾರಿ ಪ್ರದೇಶಗಳಿಂದ ದೂರವಿರಿ. ಮುಂದಿನ ಕೆಲ ದಿನಗಳು ಮುಂಗಾರಿನ ಅಬ್ಬರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

error: No Copying!