ಕಲಬುರ್ಗಿ: ದಿನಾಂಕ:07-07-2026(ಹಾಯ್ ಉಡುಪಿ ನ್ಯೂಸ್)
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಲಬುರಗಿ ಪ್ರಾದೇಶಿಕ ವಿಭಾಗ ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಜನ – ಜಾನುವಾರುಗಳ ಕುಡಿಯುವ ನೀರು, ಮೇವು, ಬರ ಪರಿಸ್ಥಿತಿ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು-
-ಬರಗಾಲವೇ ಇರಲಿ, ಇಲ್ಲದಿರಲಿ. ಯಾವ ಕಾಲದಲ್ಲೂ ಕುಡಿಯುವ ನೀರಿಗೆ ತೊಂದರೆ ಆಗದಂತೆ ನಾವು ಕ್ರಮ ವಹಿಸುತ್ತೇವೆ. ಅಧಿಕಾರಿಗಳು ಕುಡಿಯುವ ನೀರಿನ ಶಾಶ್ವತ ಪರಿಹಾರದ ಕಡೆ ನಿಮ್ಮ ಅನುಭವ ಮತ್ತು ತಿಳಿವಳಿಕೆ ಹಾಗೂ ವಾಸ್ತವ ಸಂಗತಿಗಳನ್ನು ಉಪಯೋಗಿಸಿ ಕ್ರಮ ಜರುಗಿಸಬೇಕು.
ಜಿಲ್ಲಾ ಮಟ್ಟದ ಅಧಿಕಾರಿಗಳು ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಬೇಕು. ಇತರೆ ಸಮಸ್ಯೆಗಳಿಗಿಂತ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಿ. ನಿಮ್ಮ ಹಂತದಲ್ಲೇ ಮುಕ್ಕಾಲು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬಹುದು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರೆ ಪರಿಹಾರ ಸಾಧ್ಯವಿದೆ. ಶಾಸಕರು, ಸಚಿವರು ನಾನು ಬಂದು ಸೂಚನೆ ಕೊಡಬೇಕು ಎಂದು ಕಾಯುತ್ತಾ ಕೂರಬೇಡಿ. ನಿಮ್ಮ ಹಂತದಲ್ಲೇ ಬಗೆಹರಿಸಲು ಸಾಧ್ಯವಿರುವುದನ್ನು ತಕ್ಷಣ ಬಗೆಹರಿಸಬೇಕು.
ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿಯೇ ನೆಲೆಸಬೇಕು. ಅಧಿಕಾರಿಗಳು ಜನರಿಗೆ ಸುಲಭವಾಗಿ ಸಿಗುವಂತಿರಬೇಕು. ಸ್ಥಳಕ್ಕೆ ತೆರಳಿ ಸಾರ್ವಜನಿಕರ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಆಲಿಸಿ, ಅವುಗಳಿಗೆ ತ್ವರಿತ ಹಾಗೂ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು.
ನಮ್ಮ ಸರ್ಕಾರ 100 ದಿನಗಳನ್ನು ಪೂರೈಸುವ ಹೊತ್ತಿಗೆ ವಿನೂತನವಾದ, ಉತ್ತಮ ಯೋಜನೆಗಳನ್ನು ಜಾರಿಗೊಳಿಸಲು ಬ್ಲೂಪ್ರಿಂಟ್ ಸಿದ್ದಪಡಿಸಲಾಗುತ್ತಿದೆ. ನಮ್ಮ 100 ದಿನಗಳ ಯೋಜನೆ ನಿಮ್ಮೆಲ್ಲರ ಯೋಜನೆಯಾಗಬೇಕು. ನಾನು ಇಡೀ ರಾಜ್ಯ ಸಂಚಾರ ಮಾಡಿ ಹೊಸ ಹೊಸ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದೇನೆ. ಅಧಿಕಾರಿಗಳು ಕ್ರಿಯಾಶೀಲರಾಗಿದ್ದಷ್ಟೂ ಒಳ್ಳೆಯದು.
ಪರಿಶುದ್ಧ ಆಡಳಿತ, ಸರ್ವರನ್ನೂ ಒಳಗೊಳ್ಳುವ ಅಭಿವೃದ್ಧಿ ಮತ್ತು ಕಟ್ಟಕಡೆಯ ವ್ಯಕ್ತಿಗೂ ಅವರ ನಾಗರಿಕ ಹಕ್ಕುಗಳನ್ನು ತಲುಪಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಈ ಗುರಿ ಸಾಧಿಸಲು ಅಧಿಕಾರಿ ವರ್ಗ ಅತ್ಯಂತ ಕ್ರಿಯಾಶೀಲವಾಗಿ, ಜನಪರವಾಗಿ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.
ಜನತೆ ನಮ್ಮ ಮೇಲೆ ಇಟ್ಟಿರುವ ಈ ನಂಬಿಕೆಯೇ ನಮ್ಮ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ. ನಮ್ಮನ್ನು ಈ ಸ್ಥಾನದಲ್ಲಿ ಕೂರಿಸಿರುವವರು ಜನತೆ, ಆದ್ದರಿಂದ ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ.
ನಾನು ತಾಲ್ಲೂಕು ಪಂಚಾಯಿತಿ ಅಧ್ಯಕ್ಷನಾಗಿ ಆರಂಭಿಸಿ ಮುಖ್ಯಮಂತ್ರಿ ಹುದ್ದೆಯವರೆಗೆ ಎಲ್ಲಾ ಹಂತಗಳನ್ನು ದಾಟಿಕೊಂಡು ಬಂದಿದ್ದೇನೆ. ಹೀಗಾಗಿ ಆಡಳಿತದ ಪ್ರತಿಯೊಂದು ಹಂತದಲ್ಲಿ ಏನು ನಡೆಯುತ್ತದೆ ಎಂಬುದು ನನಗೆ ಚೆನ್ನಾಗಿ ಗೊತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ನೆಪಗಳನ್ನು ನಾನು ಕೇಳಲು ಸಿದ್ಧನಿಲ್ಲ, ಫಲಿತಾಂಶವೇ ಮುಖ್ಯವಾಗಿದೆ.
ನಿಮ್ಮ ಕಾರ್ಯಕ್ಷಮತೆ ಉತ್ತಮವಾಗಿದ್ದರೆ ನಾಡಿನ ಜನತೆಯ ಋಣ ತೀರಿಸಿದಂತಾಗುತ್ತದೆ. ಆದರೆ ಜನಪರವಾಗಿ ಕೆಲಸ ಮಾಡದಿದ್ದರೆ, ಜನರ ಪರವಾಗಿ ನಿಮ್ಮ ವಿರುದ್ಧ ಕ್ರಮಕೈಗೊಳ್ಳುವುದು ನನಗೆ ಅನಿವಾರ್ಯವಾಗುತ್ತದೆ.
ದೇಶದಾದ್ಯಂತ ಮಳೆಯ ಪರಿಸ್ಥಿತಿ ಕುರಿತು ಆತಂಕ ವ್ಯಕ್ತವಾಗುತ್ತಿರುವ ನಡುವೆಯೂ ರಾಜ್ಯದಲ್ಲಿ ಪರಿಸ್ಥಿತಿ ಸಮಾಧಾನಕರವಾಗಿದೆ. ಅಂತರರಾಜ್ಯ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರೊಂದಿಗೆ ಐತಿಹಾಸಿಕ ಮಟ್ಟದ ಚರ್ಚೆ ನಡೆಸಿದ್ದೇವೆ. ಕೃಷ್ಣಾ, ಕಾವೇರಿ ಮತ್ತು ಗೋದಾವರಿ ನದಿಗಳ ಜೋಡಣೆ ಯೋಜನೆಯನ್ನು ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಮುಂದುವರಿಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರವೂ ಸಕಾರಾತ್ಮಕ ಸ್ಪಂದನೆ ನೀಡಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ರಾಜ್ಯದ ಜನರ ಹಿತಾಸಕ್ತಿಯನ್ನು ಮೊದಲ ಆದ್ಯತೆಯಾಗಿ ಇಟ್ಟು ಎಲ್ಲರೂ ಒಟ್ಟಾಗಿ ಕೆಲಸ ಮಾಡಲು ತೀರ್ಮಾನಿಸಿದ್ದೇವೆ.
ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ಆರಂಭಗೊಂಡಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳು ಯಥಾವತ್ತಾಗಿ ಮುಂದುವರಿಯಲಿವೆ. ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವುದರ ಜೊತೆಗೆ ಆಡಳಿತದಲ್ಲಿ ಇನ್ನಷ್ಟು ಪಾರದರ್ಶಕತೆ, ಕಾರ್ಯಕ್ಷಮತೆ ಮತ್ತು ಜನಕೇಂದ್ರಿತ ದೃಷ್ಟಿಕೋನಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಶ್ರೀ ಡಾ. ಜಿ ಪರಮೇಶ್ವರ್, ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ, ಶ್ರೀ ಡಾ. ಶರಣಪ್ರಕಾಶ್ ಪಾಟೀಲ್, ಶ್ರೀ ಈಶ್ವರ್ ಖಂಡ್ರೆ, ಶ್ರೀ ಯು.ಟಿ ಖಾದರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಆರ್ಥಿಕ ಸಲಹೆಗಾರರಾದ ಎಲ್.ಕೆ. ಅತೀಕ್, ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



