ದಿನಾಂಕ:20-08-2026(ಹಾಯ್ ಉಡುಪಿ ನ್ಯೂಸ್)
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ.
ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ನಿರ್ವಾಹಕರು ಸಮಯಪ್ರಜ್ಞೆ ಮೆರೆದು ಪ್ರಯಾಣಿಕರನ್ನು ಕೂಡಲೇ ಕೆಳಗಿಳಿಸಿದ್ದಾರೆ. ಇದರಿಂದಾಗಿ ಭಾರಿ ಅನಾಹುತವೊಂದು ತಪ್ಪಿದ್ದು, ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್ಸಿನ ಈಡಿಸಿ (EDC) ಬಾಕ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನುವುದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ಲಭಿಸಿದ ತಕ್ಷಣವೇ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
