ಬಜೆಟ್ ವಿಶ್ಲೇಷಣೆ ಕೇವಲ ಸಂಖ್ಯೆಗಳ ಆಧಾರದ ಮೇಲೆ ಮಾಡದೆ ಫಲಿತಾಂಶಗಳ ಆಧಾರದ ಮೇಲೆ ಮಾಡಿದರೆ ಹೆಚ್ಚು ಉಪಯುಕ್ತ.
ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಸ್ವಾತಂತ್ರ್ಯ ನಂತರ ಇಲ್ಲಿಯವರೆಗೂ ಸುಮಾರು ಸಾವಿರಾರು ವಾರ್ಷಿಕ ಬಜೆಟ್ ಗಳನ್ನು ಮಂಡಿಸಿವೆ. ಪಂಚವಾರ್ಷಿಕ ಯೋಜನೆಗಳು ಮತ್ತು ಅದನ್ನು ಮೇಲ್ವಿಚಾರಣೆ ಮಾಡುವ ನೀತಿ ಆಯೋಗ ಸಹ ಇದೆ. ಅಪಾರ ಪ್ರಮಾಣದ ಎಲ್ಲಾ ದರ್ಜೆಯ ಆಡಳಿತ ಯಂತ್ರ ಸಹ ಕೆಲಸ ಮಾಡುತ್ತಲೇ ಇದೆ………….
ಯಾವ ಸರ್ಕಾರಗಳು ಸಹ ಸಾಮಾನ್ಯವಾಗಿ ಜನರಿಗೆ ತೊಂದರೆ ಕೊಡುವ ಅಥವಾ ಜನರನ್ನು ನಾಶ ಮಾಡುವ ಯೋಜನೆಗಳನ್ನು ರೂಪಿಸುವುದಿಲ್ಲ. ಬಹಳ ಜನರಿಗೆ ಒಳ್ಳೆಯದಾಗಲಿ ಎಂಬ ಆಶಯವನ್ನೇ ಹೊಂದಿರುತ್ತವೆ.
1950 ಮತ್ತು 2022 ನಡುವೆ ಭಾರತದ ಅಭಿವೃದ್ಧಿ ಸುಮಾರಾಗಿ ಆಗಿದೆ. ವಿಶ್ವ ಸಮುದಾಯ ಕೂಡಾ ತಂತ್ರಜ್ಞಾನದ ಸಹಾಯದಿಂದ ಪ್ರಗತಿಯ ಪಥದಲ್ಲಿದೆ.
ಭಾರತದ ಮಟ್ಟಿಗೆ ಅಭಿವೃದ್ಧಿ ಸಮಾನಾಂತರವಾಗಿಲ್ಲ ಮತ್ತು ಸಮಾಧಾನಕರವಾಗಿಲ್ಲ. ದೇಶದ ಶೇಕಡಾ 50% ಕ್ಕೂ ಹೆಚ್ಚು ಜನ ತಾವು ಇಷ್ಟಪಟ್ಟ ದೈನಂದಿನ ಊಟ ಬಟ್ಟೆ ವಾಸ ಮಕ್ಕಳ ಯೋಗಕ್ಷೇಮ ಮತ್ತು ಸಾಧಾರಣ ಆರೋಗ್ಯ ವ್ಯವಸ್ಥೆ ಮಾಡಿಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ.
ಬಹುತೇಕ ಸಂಪತ್ತು ಮತ್ತು ಸಂಪನ್ಮೂಲಗಳು ಕೆಲವೇ ಜನರಲ್ಲಿ ಕೇಂದ್ರೀಕೃತವಾಗಿದೆ. ಶಿಕ್ಷಣ ಆರೋಗ್ಯ ಸಂಪೂರ್ಣ ವ್ಯಾಪಾರೀಕರಣವಾಗಿದೆ.
ಇದನ್ನು ನಾವು ಪಕ್ಷಾತೀತವಾಗಿ ಮತ್ತು ನಿಷ್ಪಕ್ಷಪಾತವಾಗಿ ಭಾರತದ ನಿಜವಾದ ಹಿತಾಸಕ್ತಿಯಿಂದ ನೋಡಬೇಕು. ಯಾವುದೋ ಪಕ್ಷದ ವಕ್ತಾರರಂತೆ ಒಬ್ಬರಿಗೊಬ್ಬರು ಆಪಾದನೆ ಮಾಡುತ್ತಾ ಕೆಸರೆರಚಾಟ ಮಾಡಿದರೆ ಸತ್ಯ ಮತ್ತು ವಾಸ್ತವ ಮರೆಯಾಗಿ ಕೇವಲ ಒಣ ಚರ್ಚೆ ಮತ್ತು ಅಂಕಿಅಂಶಗಳು ಮಹತ್ವ ಪಡೆಯುತ್ತವೆ.
ಸರ್ಕಾರ ಘೋಷಿಸುವ ಯಾವುದೇ ಯೋಜನೆಗಳು ಜಾರಿಯಾಗುವುದು ನಮ್ಮ ಸರ್ಕಾರಿ ಆಡಳಿತ ಯಂತ್ರದ ಮುಖಾಂತರ. ಅದು ಈಗಾಗಲೇ ಕಿಲುಬು ಹಿಡಿದಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅದನ್ನು ಸರಿ ಮಾಡದೆ ಯಾವ ಯೋಜನೆ ಘೋಷಿಸಿದರು ಸಂಪೂರ್ಣ ಉಪಯೋಗ ಆಗುವುದಿಲ್ಲ. ಅದನ್ನು ಸರಿ ದಾರಿಗೆ ತರಲು ರಾಜಕಾರಣಿಗಳು ಹೆಚ್ಚಿನ ಮಹತ್ವ ನೀಡುತ್ತಿಲ್ಲ.
ಇಲ್ಲಿ ಇನ್ನೊಂದು ಆಶ್ಚರ್ಯಕರ ವಿಷಯವಿದೆ. ಆದಾಯ ತೆರಿಗೆ ವಿನಾಯಿತಿ, ಬೆಲೆ ಏರಿಕೆ, ವಸ್ತು ಮತ್ತು ಸೇವೆಗಳ ತೆರಿಗೆ ಹೆಚ್ಚಳ, ಸರ್ಕಾರಿ ನೌಕರರ ಸಂಬಳ ಹೆಚ್ಚಳ ಇನ್ನೂ ಮುಂತಾದ ಯೋಜನೆಗಳು ಚಾಚೂ ತಪ್ಪದೆ ಅಥವಾ ಅದಕ್ಕಿಂತ ಹೆಚ್ಚಾಗಿಯೇ ಸಂಪೂರ್ಣ ಜಾರಿಯಾಗುತ್ತದೆ. ಕಾರಣ ಈ ಯೋಜನೆಗಳು ಈಗಾಗಲೇ ವಿದ್ಯಾವಂತರಾಗಿರುವ ಮತ್ತು ವ್ಯವಸ್ಥೆಯ ಮೇಲೆ ನಿಯಂತ್ರಣ ಹೊಂದಿರುವ ಜನಗಳು ಇವುಗಳನ್ನು ಸ್ವತಃ ಅಥವಾ ಮಧ್ಯವರ್ತಿಗಳ ಮುಖಾಂತರ ಜಾರಿಯಾದ ಮಧ್ಯರಾತ್ರಿಯಿಂದಲೇ ಲಾಭ ಪಡೆದುಕೊಳ್ಳುತ್ತಾರೆ.
ಆದರೆ, ಇನ್ನೂ ಕೆಲವು ಯೋಜನೆಗಳು ಇವೆ. ಉದಾಹರಣೆಗೆ ಬಡತನ ನಿರ್ಮೂಲನೆ, ನರೇಗಾ, ಆಹಾರ ಭದ್ರತೆ, ಬೇಟಿ ಬಚಾವೋ ಬೇಟಿ ಪಡಾವೋ , ಸ್ವಚ್ಛ ಭಾರತ್, ಆಯುಷ್ಮಾನ್, ಆರ್ಟಿಐ, ಉದ್ಯೋಗ ಭದ್ರತೆ ಮುಂತಾದ ಯೋಜನೆಗಳು ಅದರ ನಿಜ ರೂಪದಲ್ಲಿ ಜನರಿಗೆ ತಲುಪುವುದು ತುಂಬಾ ಕಷ್ಟವಿದೆ.
ಜನರಲ್ಲಿ ಇರುವ ಅಜ್ಞಾನ, ಬಡತನ ದಾಖಲೆ ಮತ್ತು ಮಾಹಿತಿಯ ಕೊರತೆ, ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತ, ರಾಜಕಾರಣಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷತನ ಮತ್ತು ಸೋಮಾರಿತನ, ಅಸೂಯೆ ಮುಂತಾದ ಕಾರಣಗಳು ಇವುಗಳನ್ನು ಜಾರಿಯಾಗಲು ಬಿಡುವುದಿಲ್ಲ. ಜಾರಿಯಾದರು ಅದು ನೆಪ ಮಾತ್ರ.
ಪಾರ್ಲಿಮೆಂಟ್ ಅಥವಾ ವಿಧಾನಸೌದದಲ್ಲಿ ಅಂಕಿಅಂಶಗಳ ಸರ್ಕಸ್ ಮಾಡುತ್ತಾ ಬಜೆಟ್ ಮಂಡಿಸುವುದು ಮತ್ತು ಅದರ ಪರ ವಿರೋಧದ ಚರ್ಚೆಗಳಿಗಿಂತ ಅದರ ಅನುಷ್ಠಾನ ಮತ್ತು ವಾಸ್ತವ ಫಲಿತಾಂಶಗಳ ಬಗ್ಗೆ ಹೆಚ್ಚಿನ ಗಮನ ಹರಿಸಿದರೆ ನಿಜವಾದ ಮತ್ತು ಸಮಾನವಾದ ಅಭಿವೃದ್ಧಿ ಸಾಧ್ಯ. ಇಲ್ಲದಿದ್ದರೆ ಪ್ರತಿ ಸರ್ಕಾರಗಳ ಪ್ರತಿ ಬಜೆಟ್ ಕೇವಲ ಸಾಂಕೇತಿಕ ಶಾಸ್ತ್ರವಾಗುತ್ತದೆ. ಚುನಾವಣಾ ರಾಜಕೀಯದ ನಾಟಕಗಳಾಗುತ್ತವೆ.
ಇದು ಎಲ್ಲಾ ಪಕ್ಷಗಳ ಎಲ್ಲಾ ಸರ್ಕಾರಗಳಿಗೂ ಸಮನಾಗಿ ಅನ್ವಯ……
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ ಎಚ್. ಕೆ.
9844013068…